ಗಜೇಂದ್ರಗಡ( ಸತ್ಯದರ್ಶನ ) ಸೆ. 13 : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮ ದೈನಂದಿನ ಕರ್ತವ್ಯದಲ್ಲಿ ಸಮಯ ಪ್ರಜ್ಞೆ ಹಾಗೂ ಸೇವ ಮನೋಭಾವ ಮೈಗೂಡಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಸಹಕಾರಿಯಾಗಿರಬೇಕೆಂದು ಜಿಲ್ಲಾಧಿಕಾರಿ ವೈಶಾಲಿ. ಎಂ.ಎಲ್ ಅವರು ಸೂಚಿಸಿದರು.
ಗಜೇಂದ್ರಗಡ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪುರಸಭೆ ನೌಕರರು ತಮ್ಮ ವ್ಯಾಪ್ತಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಪಟ್ಟಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಅಗತ್ಯಕ್ಕನುಸಾರ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲೆಂದರಲ್ಲಿ ಕಸ ಬಿಳದಂತೆ ನಿಯಮಿತವಾಗಿ ಶುಚಿತ್ವ ಕಾರ್ಯ ಕೈಗೊಳ್ಳಬೇಕು.
ಅಲ್ಲದೇ ಅಧಿಕ ಮಳೆಯಾದ ಸಂದರ್ಭದಲ್ಲಿ ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ನಗರದ ಜನತೆಗೆ ನಿಯಮಿತವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು.
ನಂತರ ತಹಶೀಲ್ದಾರ ಕಚೇರಿಯಲ್ಲಿ ಜರುಗಿದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ತಾಲೂಕಿನಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗುವ ಸಂಭವವಿದ್ದು ನಿಯೋಜಿತ ಅಧಿಕಾರಿಗಳು ಸಮಯೋಚಿತವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸಲು ಸೂಚಿಸಿದರು.
ಅತೀವೃಷ್ಠಿಯಿಂದ ಹಾನಿಗೊಳಗಾದ ಮನೆ, ಕೃಷಿ, ತೋಟಗಾರಿಕೆ ಬೆಳೆ ಹಾಗೂ ರಸ್ತೆ, ಕಟ್ಟಡಗಳ ಕುರಿತು ಶೀಘ್ರ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಹಾಗೂ ಸಂತ್ರಸ್ಥರಿಗೆ ಸರ್ಕಾರದ ನೆರವು ಸಮಯಕ್ಕೆ ಸರಿಯಾಗಿ ದೊರಕಿಸುವ ಕಾರ್ಯವನ್ನು ಮಾಡಬೇಕು ಎಂದರು.
ಸಭೆಯ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂಧಿಸುವ ಮೂಲಕ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗಬೇಕು.
ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿ ವರ್ಗ ಮುಂದಾಗಬೇಕು ಎಂದರು. ನಂತರ ಜಿಲ್ಲಾಧಿಕಾರಿಗಳು ಗಜೇಂದ್ರಗಡದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು. ನಂತರ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಅತೀವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳ ಪ್ರದೇಶವನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಅತೀಯಾದ ಮಳೆಯಿಂದ ಹಾನಿಯಾದ ಮೆಕ್ಕೆಜೋಳ ವೀಕ್ಷಿಸಿ ಸರ್ಕಾರದ ಮಾರ್ಗಸೂಚಿಯಂತೆ ಜಂಟಿ ಸಮೀಕ್ಷೆಯನ್ನು ಚುರುಕುಗೊಳಿಸಿ ಅರ್ಹರಿಗೆ ಪರಿಹಾರ ಒದಗಿಸಬೇಕು. ಸಮೀಕ್ಷಾ ಕಾರ್ಯವನ್ನು ನಿಖರವಾಗಿ ಕೈಗೊಂಡು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಅನ್ನಪೂರ್ಣ, ಗಜೇಂದ್ರಗಡ ತಾಲೂಕು ನೋಡೆಲ್ ಅಧಿಕಾರಿಯಾದ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ತಹಶೀಲ್ದಾರ ಎಂ.ಟಿ.ಹಸನಸಾಬ, ಮುಖ್ಯಾಧಿಕಾರಿ ಮಹಾಂತೇಶ ಬಿಳಗಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೊಷ ಪಾಟೀಲ ಸೇರಿದಂತೆ ಕೃಷಿ, ತೋಟಗಾರಿಕೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
