ಬೆಳಗಾವಿ: ದೇವಸ್ಥಾನದ ಜಾತ್ರೆಗೆ ಭಕ್ತಿಯಿಂದ ತೆರಳಿದ್ದ ಜನರಿಗೆ ಪ್ರಸಾದ ಸೇವಿಸಿದ ಬಳಿಕ ಅನಾರೋಗ್ಯ ಕಾಣಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ 100ಕ್ಕೂ ಹೆಚ್ಚು ಭಕ್ತರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ಪ್ರಸಾದ ಸೇವಿಸಿದ ಕೆಲವೇ ಸಮಯದಲ್ಲಿ ಭಕ್ತರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಕಬ್ಬೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಈ ಪೈಕಿ 71 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸುಮಾರು 30 ಜನರಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆಯ ವೇಳೆ ಇಷ್ಟೊಂದು ಸಂಖ್ಯೆಯಲ್ಲಿ ಭಕ್ತರು ಅಸ್ವಸ್ಥಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸಾದ ಸೇವನೆಯಿಂದಲೇ ಅಸ್ವಸ್ಥತೆ ಉಂಟಾಗಿದೆಯೇ ಎಂಬುದನ್ನು ಖಚಿತಪಡಿಸಲು ಸಂಬಂಧಪಟ್ಟ ಅಧಿಕಾರಿಗಳ ಪರಿಶೀಲನೆ ಮಹತ್ವದ್ದಾಗಿದೆ
