ಗದಗ:( ಸತ್ಯದರ್ಶನ ) ಸೆ. 9: ಗದಗ ತಾಲೂಕಿನ ಮದಗಾನೂರು ಹಾಗೂ ಹೊಂಬಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಲೋಕೊಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರವಾಹ ಹಾಗೂ ಅತೀವೃಷ್ಠಿಯಿಂದ ಹಾನಿಯಾದ ಮನೆಗಳಿಗೆ ತ್ವರಿತ ಪರಿಹಾರ ದೊರಕಿಸಲು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.
ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಹತ್ತು ದಿನದೊಳಗಾಗಿ ಪರಿಹಾರ ತಲುಪಿಸಬೇಕು ಎಂದರು.
ಅಧಿಕ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು ಕೂಡಲೇ ಸಂತ್ರಸ್ಥರಿಗೆ ಆಹಾರ ಧಾನ್ಯ ವಿತರಿಸಲು ಸೂಚಿಸಲಾಗಿದೆ.
ಜಿಲ್ಲೆಯ ನಾಗಾವಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆಯಾದ ವರದಿಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಗಿಡಾಗಿವೆ. ಜೊತೆಗೆ ಅಪಾರ ಪ್ರಮಾಣದ ಮನೆಗಳು, ರಸ್ತೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ.
ಅಧಿಕಾರಿಗಳ ತಂಡ ಹಾನಿ ಪ್ರಮಾಣದ ಸಮೀಕ್ಷೆಯನ್ನು ನಿಖರವಾಗಿ ಸರ್ಕಾರಕ್ಕೆ ಸಲ್ಲಿಸಿ ಪರಿಹಾರ ದೊರಕಿಸಲು ತಿಳಿಸಲಾಗಿದೆ ಎಂದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತೀವೃಷ್ಠಿಯಿಂದಾದ ಹಾನಿಗೆ ಪರಿಹಾರ ಒದಗಿಸಲು 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.
ಅಲ್ಲದೇ ಸಂಪುಟ ಸಹೊದ್ಯೋಗಿಗಳು ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ.
ರೈತರ ಜಮೀನುಗಳಿಗೆ ಅಪಾರ ನೀರು ನುಗ್ಗಿ ಹಾನಿಯಾಗಿದ್ದು ಇದನ್ನು ನರೇಗಾ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. ಮಳೆ ನಿಂತ ತಕ್ಷಣ ರಸ್ತೆಗಳ ದುರಸ್ತಿಗೆ ಸೂಚಿಸಲಾಗಿದೆ. ಒಟ್ಟಾರೆ ಜಿಲ್ಲೆಯ ಹಾನಿಯಾದ ಬೆಳೆ, ಮನೆ, ರಸ್ತೆಗಳ ದುರಸ್ತಿಗೆ ಅಧಿಕಾರಿಗಳು ಸ್ಪಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಕಿಶನ ಕಲಾಲ, ಲಿಂಗದಾಳ ಗ್ರಾಮ ಪಂಚಾಯತ ಅಧ್ಯಕ್ಷ ಪ್ರದೀಪ ನವಲಗುಂದ, ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಲೋಕೊಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.
