ಗದಗ (ಸತ್ಯ ದರ್ಶನ ) ಸೆ. 29: ಸಫಾಯಿ ಕರ್ಮಚಾರಿಗಳನ್ನು ಸಮಾಜದ ಮುಖ್ಯ ವಾಹಿನಿ ತರುವ ಸಂಬಂಧ ಜಾರಿ ಇರುವ ಕಾನೂನುಗಳು ಹಾಗೂ ವಿವಿಧ ಇಲಾಖೆಗಳಿಂದ ಒದಗಿಸಲಾಗುವ ಸೌಲಭ್ಯಗಳ ಕುರಿತು ಸಫಾಯಿ ಕರ್ಮಚಾರಿಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಫಾಯಿ ಕರ್ಮಚಾರಿ,ಮ್ಯಾನ್ಯುವಲ್ ಸ್ಕ್ಯಾವೇಂಜರ್ಸಗಳನ್ನು ಸಮಾಜದ ಮುಖ್ಯ ವಾಹನಿಗೆ ತರುವ ಸಂಭಂದ ಇರುವ ಕಾನೂನು ಹಾಗೂ ಸರ್ಕಾರದ ವಿವಿಧ ಇಲಾಖೆಗಳು ನೀಡುತ್ತಿರುವ ಸೌಲಭ್ಯಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಚ್ಛತಾ ಕಾರ್ಮಿಕರಿಗೆ ನಿಯಮಿತವಾಗಿ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಸುರಕ್ಷತೆ ಪರಿಕರಗಳನ್ನು ಬಳಸುತ್ತಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಿ ಸುರಕ್ಷಾ ಪರಿಕರಗಳ ಬಳಕೆಯ ಮಹತ್ವ ಕುರಿತು ಮನವರಿಕೆ ಮಾಡಿಕೊಡಲು ಮುಂದಾಗುವಂತೆ ಹೇಳಿದರು.
ಸಫಾಯಿ ಕರ್ಮಚಾರಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿರುವ ಎಂ.ಎಸ್. ಕಾಯ್ದೆ 2013ರ ಕುರಿತು ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಫಾಯಿ ಕರ್ಮಚಾರಿಗಳಿಗೆ ಕಾಯ್ದೆಯ ಬಗ್ಗೆ ಕಾರ್ಯಾಗಾರಗಳನ್ನು ಆಯೋಜಿಸಿ ಅವರುಗಳಿಗೆ ಕಾಯ್ದೆಯ ಕುರಿತು ಅರ್ಥವಾಗುವ ಹಾಗೆ ವಿವರಣೆ ನೀಡುವಂತಹ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸುವಂತೆ ತಿಳಿಸಿದರು. ಕಾಲ ಕಾಲಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸ್ವಚ್ಛತಾ ಕಾರ್ಮಿಕರ ಕುಂದು ಕೊರತೆಗಳ ಸಭೆಗಳನ್ನು ಜರುಗಿಸಿ ಅವರ ಸಮಸ್ಯೆಗಳಿಗೆÀ ಸ್ಪಂಧಿಸುವಂತೆ ತಿಳಿಸಿದರು. 
ಎಂ.ಎಸ್.ಕಾಯ್ದೆ 2013ರನ್ವಯ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಮೀಕ್ಷೆ ಜರುಗಿಸಿ ವರದಿ ಸಲ್ಲಿಸಬೇಕು. ಅಲ್ಲದೇ ಮ್ಯಾನ್ಯುಯಲ್ ಸ್ಕ್ಯಾವೇಂಜಿಗ್ ಮಾಡಿಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಅನೈರ್ಮಲ್ಯ ಶೌಚಾಲಯಗಳನ್ನು ತೆರವುಗೊಳಿಸಿ ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಿ ಅವುಗಳನ್ನು ನಿಯಮಿತವಾಗಿ ಬಳಕೆ ಆಗುವ ಹಾಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಉಪ ವಿಭಾಗಾಧಿಕಾರಿ ಅನ್ನಪೂರ್ಣ, ಜಿಲ್ಲಾ ಪಂಚಾಯತ ಉಪನಿರ್ದೇಶಕ ಬಸವರಾಜ ಅಡವಿಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಸೇರಿದಂತೆ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸಮಿತಿಯ ಸದಸ್ಯರುಗಳು ಹಾಜರಿದ್ದರು.
