ಗದಗ : (ಸತ್ಯ ದರ್ಶನ )ಅ. 14: ಜಿಲ್ಲೆಯಲ್ಲಿ ಮುಕ್ತಾಯ ಹಂತದಲ್ಲಿರುವ ಗ್ರಾಮದ ಪ್ರತಿ ಮನೆಗೂ ಪೈಪ್ ಲೈನ್ ಅಳವಡಿಸಿ ನೀರು ಪೂರೈಕೆ ಮಾಡುವ ಜಲಜೀವನ ಮಷಿನ್ ಯೋಜನೆಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಎಲ್ಲ ಕುಟುಂಬಗಳಿಗೂ ಸಮರ್ಪಕ ನೀರು ಸರಬರಾಜು ಮಾಡುವಂತೆ ಸಂಸದ ಶಿವಕುಮಾರ ಉದಾಸಿ ತಿಳಿಸಿದರು.
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ ) ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಾಮಗಾರಿ ಪೂರ್ಣಗೊಂಡಿರುವ ಕಡೆಗಳಲ್ಲಿ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸಬೇಕು . ಸರ್ಕಾರದ ಉದ್ದೇಶ ಈಡೇರಿಕೆಗಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಕಾಮಗಾರಿ ಪೂರ್ಣಗೊಂಡ ಪ್ರದೇಶದಲ್ಲಿ ನಳದ ಸಂಪರ್ಕ ದಿಂದ ಬರುವ ನೀರನ್ನು ಸಮರ್ಪಕವಾಗಿ ಬಳಸಲು ಜಾಗೃತಿ ಮೂಡಿಸಬೇಕು ಎಂದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ವಸತಿ ರಹಿತ ಮತ್ತು ನಿವೇಶನ ರಹಿತ ಫಲಾನುಭವಿಗಳಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡನ್ನು ಆಧಾರ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಈಗಾಗಲೇ ಪ್ರಗತಿಯಲ್ಲಿರುವ ವಸತಿ ಮನೆಗಳ ನಿರ್ಮಾಣ ಕುರಿತಂತೆ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೆ ಇರುವ ತಾಂತ್ರಿಕ ತೊಂದರೆಗಳನ್ನು ಪರಿಹರಿಸಿ ಅನುದಾನ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಅನುಷ್ಟಾನ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಇರಬೇಕು ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ ಮಾತನಾಡಿ ಜಿಲ್ಲಾ ಪಂಚಾಯತ್ ಸಂಬಂಧಿತ ಇಲಾಖೆಗಳಿಗೆ ನಿಗದಿಪಡಿಸಲಾದ ಕೇಂದ್ರ ಹಾಗೂ ರಾಜ್ಯ ಪುರಸ್ಕøತ ಯೋಜನೆಗಳ ಅನುಷ್ಟಾನದಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಗೆ ಅಧಿಕಾರಿಗಳು ಮುಂದಾಗಬೇಕು.ಯಾವುದೇ ಕಾರಣಕ್ಕೂ ಕಾಮಗಾರಿಗಳ ಅನುಷ್ಟಾನದಲ್ಲಿ ಅನುಮಾನಕ್ಕೆ ಆಸ್ಪದವಿಲ್ಲದಂತೆ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
