ಆ.15ರಿಂದ ಸೆ.15ರವರೆಗೆ ಜಾಬ್ ಕಾರ್ಡ ಅಭಿಯಾನ*
*ಮನೆ-ಮನೆಗೆ ತೆರಳಿ ಅರ್ಹ ಕುಟುಂಬಗಳ ನೋಂದಣಿಗೆ ಸೂಚನೆ
ರೋ ಣ* : ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬಕ್ಕೂ ಉದ್ಯೋಗಾವಕಾಶದ ಸೌಲಭ್ಯ ತಲುಪಿಸುವ ಉದ್ದೇಶದಿಂದ ರೋಣ ತಾಲೂಕು ಪಂಚಾಯಿತಿ ವ್ಯಾಪ್ತಿಯ 22 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ VBGRAMG ಜಾಬ್ಕಾರ್ಡ್ ಮೇಳ ಆಯೋಜಿಸಲಾಗಿದೆ.
ಜಾಬ್ಕಾರ್ಡ್ ಮೇಳದ ಅಂಗವಾಗಿ ರೋಣ ತಾಲೂಕು ಪಂಚಾಯಿತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಾಬ್ಕಾರ್ಡ್ ಮೇಳದ ಬ್ರೌಷರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಖಾತರಿ ಸೌಲಭ್ಯ ತಲುಪಿಸುವಲ್ಲಿ ಜಾಬ್ಕಾರ್ಡ್ ಪ್ರಮುಖ ದಾಖಲೆಯಾಗಿದ್ದು, ಅರ್ಹ ಕುಟುಂಬಗಳು ಯಾವುದೇ ಕಾರಣಕ್ಕೂ ಸೌಲಭ್ಯದಿಂದ ಹೊರಗುಳಿಯದಂತೆ ವಿಶೇಷ ಗಮನ ಹರಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
*ಮನೆ-ಮನೆಗೆ ಭೇಟಿ ನೀಡಿ ಮಾಹಿತಿ*
ತಾಲೂಕಿನ 22 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೇಳವನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಜಾಬ್ಕಾರ್ಡ್ ಹೊಂದಿರದ ಅರ್ಹ ಕುಟುಂಬಗಳನ್ನು ಗುರುತಿಸಿ, ಅಂತಹ ಕುಟುಂಬಗಳಿಗೆ ಯೋಜನೆಯ ಕುರಿತು ಮಾಹಿತಿ ನೀಡಬೇಕು. ಅಗತ್ಯವಿರುವ ಕುಟುಂಬಗಳಿಂದ ಅರ್ಜಿ ಹಾಗೂ ದಾಖಲೆಗಳನ್ನು ಪಡೆದು ಜಾಬ್ಕಾರ್ಡ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.
ಇದರ ಜೊತೆಗೆ, ಈಗಾಗಲೇ ಜಾಬ್ಕಾರ್ಡ್ ಹೊಂದಿರುವ ಕುಟುಂಬಗಳಿಗೂ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಬೇಕು. ಗ್ರಾಮಸ್ಥರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸಿಬ್ಬಂದಿಯೇ ಗ್ರಾಮಗಳಿಗೆ ತೆರಳಿ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚನೆ ನೀಡಲಾಯಿತು.
*ಯಾರೂ ಸೌಲಭ್ಯದಿಂದ ವಂಚಿತರಾಗದಂತೆ ಕ್ರಮ*
ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿರುವುದರಿಂದ, ಅರ್ಹತೆಯಿರುವ ಯಾವುದೇ ಕುಟುಂಬವೂ ಜಾಬ್ಕಾರ್ಡ್ ಮತ್ತು ಉದ್ಯೋಗ ಖಾತರಿ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಮೇಳದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಕುಟುಂಬಗಳನ್ನು ಗುರುತಿಸುವಂತೆ ಅಧಿಕಾರಿಗಳು ತಿಳಿಸಿದರು.
VBGRAMG ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ NRLM ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಗ್ರಾಮೀಣ ಜನರಿಗೆ ಯೋಜನೆಯ ಮಾಹಿತಿ ತಲುಪಿಸಬೇಕು. ವಿಶೇಷವಾಗಿ ಉದ್ಯೋಗದ ಅವಶ್ಯಕತೆ ಇರುವ ಕುಟುಂಬಗಳನ್ನು ಗುರುತಿಸಿ, ಅವರಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಸೂಚಿಸಲಾಯಿತು.
*ಸಿಬ್ಬಂದಿಗೆ ಜವಾಬ್ದಾರಿ ಹಂಚಿಕೆ*
ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಜಾಬ್ಕಾರ್ಡ್ ಮೇಳದ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಿಬ್ಬಂದಿಗೆ ಜವಾಬ್ದಾರಿ ನೀಡಲಾಗುತ್ತದೆ. ಮನೆ-ಮನೆಗೆ ಭೇಟಿ, ಅರ್ಹ ಕುಟುಂಬಗಳ ಗುರುತಿಸುವಿಕೆ, ಜಾಬ್ಕಾರ್ಡ್ ನೋಂದಣಿ ಹಾಗೂ ಯೋಜನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ.
ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಹೊರಗಡೆ ತೆರಳುವ ಪರಿಸ್ಥಿತಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವುದು ಮೇಳದ ಪ್ರಮುಖ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿ, VBGRAMG ಸಿಬ್ಬಂದಿ, NRLM ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.
