ಗದಗ : ಸೆಪ್ಟೆಂಬರ 30: ಚುನಾವಣಾ ಪ್ರಕ್ರಿಯೆಯು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಪ್ರತಿಯೊಬ್ಬ ಅಧಿಕಾರಿಯೂ ಅತ್ಯಂತ ಎಚ್ಚರಿಕೆ, ಜವಾಬ್ದಾರಿ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
ಭಾರತ ಚುನಾವಣಾ ಆಯೋಗ ಹಾಗೂ ಗದಗ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ಎಂ.ಸಿ.ಸಿ. ನೋಡಲ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಟೀಮ್ (ಎಫ್ಎಸ್ಟಿ), ವೀಡಿಯೋ ಸರ್ವೆಲೆನ್ಸ್ ಟೀಮ್ (ವಿಎಸ್ಟಿ) ಹಾಗೂ ವೀಡಿಯೋ ವೀವಿಂಗ್ ಟೀಮ್ (ವಿವಿಟಿ) ತಂಡಗಳಿಗಾಗಿ ಬುದವಾರ ಸೆಪ್ಟೆಂಬರ 30 ರಂದು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ, ನಿಯಮಬಾಹಿರ ಚಟುವಟಿಕೆ, ಮತದಾರರಿಗೆ ಆಮಿಷವೊಡ್ಡುವ ಪ್ರಯತ್ನ, ಅನುಮತಿ ಇಲ್ಲದೆ ಪ್ರಚಾರ ನಡೆಸುವುದು ಅಥವಾ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಕಂಡುಬಂದಲ್ಲಿ ಅದನ್ನು ನಿರ್ಲಕ್ಷಿಸದೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳ ಕುರಿತು ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸೂಕ್ತ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಎಫ್ಎಸ್ಟಿ ತಂಡಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಚುನಾವಣಾ ಸಂಬಂಧಿತ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವ ಸಾಧ್ಯತೆ ಇರುವ ಘಟನೆಗಳು ಕಂಡುಬಂದಲ್ಲಿ ತ್ವರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.
ಅದೇ ರೀತಿ ವಿಎಸ್ಟಿ ಹಾಗೂ ವಿವಿಟಿ ತಂಡಗಳು ಚುನಾವಣಾ ಪ್ರಚಾರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಿಯಮಾನುಸಾರ ವೀಡಿಯೋ ದಾಖಲಿಸಬೇಕು. ದಾಖಲಿಸಲಾದ ಮಾಹಿತಿಯನ್ನು ಸರಿಯಾಗಿ ಸಂರಕ್ಷಿಸಿ, ಅಗತ್ಯವಿರುವ ಸಂದರ್ಭದಲ್ಲಿ ಪರಿಶೀಲನೆಗೆ ಹಾಗೂ ವರದಿ ತಯಾರಿಕೆಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಎಫ್ಎಸ್ಟಿ ಹಾಗೂ ವಿಎಸ್ಟಿ ತಂಡಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಚಟುವಟಿಕೆಗಳ ಕುರಿತು ಪ್ರತಿದಿನ ಸಮಗ್ರ ವರದಿಯನ್ನು ನಿಗದಿತ ಸಮಯದೊಳಗೆ ಜಿಲ್ಲಾ ಚುನಾವಣಾ ಶಾಖೆಗೆ ಸಲ್ಲಿಸಬೇಕು. ವರದಿ ಸಲ್ಲಿಕೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು.
ಚುನಾವಣಾ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಯ ಪಾತ್ರವೂ ಮಹತ್ವದ್ದಾಗಿದೆ. ಯಾವುದೇ ಒಂದು ತಂಡದ ಕಾರ್ಯನಿರ್ವಹಣೆಯಲ್ಲಿ ಉಂಟಾಗುವ ಲೋಪವು ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದಾದ್ದರಿಂದ, ಎಲ್ಲರೂ ಪರಸ್ಪರ ಸಮನ್ವಯ ಹಾಗೂ ಸೂಕ್ತ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.
ಚುನಾವಣಾ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಯಾವುದೇ ವ್ಯಕ್ತಿ, ಸಂಘಟನೆ ಅಥವಾ ರಾಜಕೀಯ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ವರ್ತಿಸದೆ, ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳು ಹಾಗೂ ಸಂಬಂಧಿಸಿದ ನಿಯಮಗಳನ್ನು ತಿಳಿದುಕೊಂಡು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೆಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಡಿವೈಎಸ್ಪಿ ಮಹಾಂತೇಶ್ ಸಜ್ಜನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
